Blog

ಆಗಸ್ಟ್ 7 ರಂದು ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳಕ್ಕೆ ಚಾಲನೆ

 

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ದೇಶದ ಅತಿದೊಡ್ಡ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ರ 16ನೇ ಆವೃತ್ತಿಯ ಉದ್ಘಾಟನಾ ಸಮಾರಂಭವು ಆಗಸ್ಟ್ 7ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆಗೊಳ್ಳಲಿದೆ ಎಂದು ಉದ್ಯೋಗ ಮೇಳದ ರೂವಾರಿ ಡಾ. ಎಂ. ಮೋಹನ್ ಆಳ್ವ ಹೇಳಿದರು.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ವಹಿಸಲಿದ್ದಾರೆ. ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಉಪಸ್ಥಿತರಿರಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಆಳ್ವಾಸ್ ಉದ್ಯೋಗ ಮೇಳದ ಆರಂಭಿಕ ಹಂತದಲ್ಲಿ ಯೋಜನೆ, ಸಂಘಟನೆ ಹಾಗೂ ಯಶಸ್ವಿ ಅನುಷ್ಠಾನಕ್ಕೆ ಸಂಪೂರ್ಣ ಸಹಕಾರ ನೀಡಿ ಮಹತ್ವದ ಕೊಡುಗೆ ನೀಡಿದ್ದ, ಇತ್ತೀಚೆಗೆ ಸ್ವರ್ಗಸ್ಥರಾದ ಎ.ಕೆ. ಮಹೇಶ್ ಶೇಖರವರ ಸ್ಮರಣಾರ್ಥ, ಈ ವರ್ಷದ ಆಳ್ವಾಸ್ ಪ್ರಗತಿಯ ಉದ್ಘಾಟನಾ ವೇದಿಕೆಯನ್ನು ಅವರಿಗೆ ಗೌರವಪೂರ್ವಕವಾಗಿ ಸಮರ್ಪಿಸಲಾಗುತ್ತಿದೆ. ಅವರ ಸೇವೆ, ಬದ್ಧತೆ ಹಾಗೂ ಉದ್ಯೋಗ ಮೇಳದ ಬೆಳವಣಿಗೆಯಲ್ಲಿ ಸಲ್ಲಿಸಿದ ಅಮೂಲ್ಯ ಕೊಡುಗೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಈ ಮೂಲಕ ಕೃತಜ್ಞತೆಯಿಂದ ಸ್ಮರಿಸುತ್ತದೆ.

ಉದ್ಯಮಶೀಲತೆ, ಉದ್ಯೋಗ ಸೃಷ್ಟಿ ಮತ್ತು ಸಮಾಜಮುಖಿ ಸೇವೆಯಲ್ಲಿ ಸಾಧನೆಗೈದ ಕರಾವಳಿಯ ಸಾಧಕರಿಗೆ ಆಳ್ವಾಸ್ ಪ್ರಗತಿಯಲ್ಲಿ ಗೌರವ ಸನ್ಮಾನ ಉದ್ಯೋಗ ಸೃಷ್ಟಿ, ಉದ್ಯಮಶೀಲತೆ ಹಾಗೂ ಸಮಾಜಮುಖಿ ಸೇವೆಯಲ್ಲಿ ಗಣನೀಯ ಸಾಧನೆಗೈದು ಸಮಾಜಕ್ಕೆ ಮಾದರಿಯಾಗಿರುವ ಕರಾವಳಿ ಮೂಲದ ಐವರು ಗಣ್ಯರನ್ನು ಈ ಸಂದರ್ಭದಲ್ಲಿ ಗೌರವ ಸನ್ಮಾನ ಮಾಡಲಾಗುವುದು. ಸನ್ಮಾನಕ್ಕೆ ಭಾಜನರಾಗುವವರಲ್ಲಿ ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ನ ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.
ಜನಾರ್ದನ, ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಭವಾನಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಕುಸುಮೋದರ ಡಿ. ಶೆಟ್ಟಿ, ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸರ್ಟೀಸ್ ಕಾಂಟ್ರಾಕ್ಟಿಂಗ್ ಕಂಪನಿಯ ಸಹ-ಸಂಸ್ಥಾಪಕ ಮಹಮ್ಮದ್ ಅಶ್ವಾಕ್ ಭಾಗವಹಿಸಲಿದ್ದಾರೆ.

ಈ ಬಾರಿಯ ಉದ್ಯೋಗಮೇಳದಲ್ಲಿ ದೇಶ ವಿದೇಶಗಳ 350ಕ್ಕೂ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, ಆರೋಗ್ಯ, ಔಷಧ, ಆತಿಥ್ಯ, ಚಿಲ್ಲರೆ ವ್ಯಾಪಾರ, ಮಾಧ್ಯಮ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 26300ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿರಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಹಾಗೂ ಅನುಭವ ಹೊಂದಿದ ಅಭ್ಯರ್ಥಿಗಳು ತಮ್ಮ ಅರ್ಹತೆಗೆ ತಕ್ಕ ಉದ್ಯೋಗಗಳನ್ನು ಪಡೆಯಲು ಇದು ಅತ್ಯುತ್ತಮ ವೇದಿಕೆಯಾಗಿದೆ.

ಉಚಿತ ಹಾಗೂ ಕಡ್ಡಾಯ ನೋಂದಾಣಿ:
ಅಭ್ಯರ್ಥಿಗಳು https://alvaspragati.com/candidate-registration ಉಚಿತವಾಗಿ ಭಾಗವಹಿಸುವ ನೋಂದಾಯಿಸಿಕೊಳ್ಳಬಹುದಾಗಿದೆ. ಕಂಪನಿಗಳ ಉದ್ಯೋಗ ಮೇಳದಲ್ಲಿ ವೆಬ್‌ಸೈಟ್‌ನಲ್ಲಿ ನಿರಂತರವಾಗಿ ನವೀಕರಿಸಲಾಗುತ್ತದೆ. ಕಂಪನಿಗಳ ಮಾಹಿತಿಯನ್ನು www.alvaspragati.com ವೆಬ್ಸೈಟ್ ನಲ್ಲಿ ದಾಖಲಿಸಲಾಗಿದೆ.

ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಅಭ್ಯರ್ಥಿಗಳಿಗಾಗಿ ಆಗಸ್ಟ್ 6ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: 9611750531 / 9741440490 / 9008907716

/ 7975223865 ಸಂಪರ್ಕಿಸಬಹುದಾಗಿದೆ.

Related posts

ಕಾರ್ಕಳದಲ್ಲಿ ಸಾಂಸ್ಕೃತಿಕ ವೈಭವ

Madhyama Bimba

ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿ ಪರಾರಿ ವಾಹನ ಪತ್ತೆ

Madhyama Bimba

ಅಂಬೇಡ್ಕರ್ ಅವಹೇಳನ ಬಗ್ಗೆ ಬಿಜೆಪಿ ಮಾತನಾಡಲೇ ಇಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More