ಮಣ್ಣಿನಿಂದ ನಿರ್ಮಿತ ಗಣಪತಿ ಮೂರ್ತಿಗಳ ಪ್ರತಿಷ್ಠಾನ ಮಾಡುವುದರೊಂದಿಗೆ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ – ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು.
ಅವರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬ ಆಚರಣೆಯ ಸಲುವಾಗಿ ಕಾನೂನು ಸುವಸ್ಯವಸ್ಥೆಗೆ ಸಂಬಂಧಿಸಿದಂತೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಸಾಲಿನ ಗೌರಿ – ಗಣೇಶ ಹಬ್ಬವನ್ನು ಇದೇ ಸೆಪ್ಟೆಂಬರ್ 13 ಮತ್ತು 14ರಂದು ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸುವುದರೊಂದಿಗೆ ನೈಸರ್ಗಿಕ ಜಲಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೈಸರ್ಗಿಕವಾಗಿ ನೀರಿನಲ್ಲಿ ಕರಗುವುದಿಲ್ಲ. ಇವು ಮಾಲಿನ್ಯ ಉಂಟುಮಾಡುವುದರೊಂದಿಗೆ ಜಲಚರಗಳಿಗೆ ಹಾನಿ ಉಂಟು ಮಾಡುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.
ನೈಸರ್ಗಿಕ ಜಲ ಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿರುವ ತಾತ್ಕಾಲಿಕ/ ಕೃತಕ ವಿಸರ್ಜನಾ ತೊಟ್ಟಿಗಳಲ್ಲಿ ವಿಗ್ರಹಗಳನ್ನು ವಿಸರ್ಜನೆ ಮಾಡಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ ಹಾಗೂ ಒಣಕಸವನ್ನು ನೀರಿಗೆ ಎಸೆಯದೆ ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಬೇಕು. ನದಿ, ಕೆರೆ, ಕೊಳ ಅಥವಾ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜನೆ ಅನಿವಾರ್ಯವಾಗಿರುವಲ್ಲಿ ನಿಗಧಿತ ಸ್ಥಳಗಳಲ್ಲಿ ಸುರಕ್ಷತಾ ವ್ಯವಸ್ಥೆಗಳೊಂದಿಗೆ ಮೌಲಭೂತ ಸೌಕರ್ಯಗಳನ್ನು ನಿಗಧಿಪಡಿಸಿ, ರಕ್ಷಣಾ ತಂಡ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.
ಪಿ.ಒ.ಪಿ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ತಡೆಗಟ್ಟಲು ಹಬ್ಬಕ್ಕೆ ಮುಂಚಿತವಾಗಿಯೇ ಮೂರ್ತಿ ತಯಾರಿಕಾ ಘಟಕಗಳು, ಸಂಗ್ರಹಣಾ ಗೋದಾಮುಗಳು ಮತ್ತು ಮಾರಾಟ ಕೇಂದ್ರಗಳ ಮೇಲೆ ನಿರಂತರ ತಪಾಸಣೆ ನಡೆಸಬೇಕು. ಒಂದೊಮ್ಮೆ ಪಿ.ಒ.ಪಿ ಬಳಸಿ ತಯಾರಿಸಿದ ಮೂರ್ತಿಗಳ ಸಂಗ್ರಹಣೆ, ಮಾರಾಟ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದರು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವಾಗ ಸಮಿತಿಯವರು ಸ್ಥಳೀಯ ಸಂಸ್ಥೆಗಳಿಂದ ಮತ್ತು ಧ್ವನಿವರ್ಧಕ ಬಳಸಲು ಪೋಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿಗಳನ್ನು ಪಡೆಯಬೇಕು. ಗಣೇಶೋತ್ಸವ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ, ರಾತ್ರಿ ೧೦ ರಿಂದ ಬೆಳಗ್ಗೆ ೬ ಗಂಟೆಯ ತನಕ ಧ್ವನಿ ವರ್ಧಕಗಳ ಬಳಕೆಯನ್ನು ಹಾಗೂ ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.
ಶಾಲಾ- ಕಾಲೇಜು, ಸಾಮಾಜಿಕ ಜಾಲತಾಣ ಹಾಗೂ ಸರ್ಕಾರೇತರ ಸಂಸ್ಥೆಗಳ ಮೂಲಕ ಸಾರ್ವಜನಿಕರಿಗೆ ಪ್ಲಾಸ್ಟರ್ ಆಪ್ ಪ್ಯಾರಿಸ್ ಮೂರ್ತಿಗಳಿಂದ ಆಗುವ ಅಪಾಯಗಳ ಕುರಿತು ಮತ್ತು ಪರಿಸರ ಸ್ನೇಹಿ ಮೂರ್ತಿಗಳ ಬಳಕೆಯ ಕುರಿತು ನಿರಂತರ ಜಾಗೃತಿ ಮೂಡಿಸಬೇಕು ಎಂದ ಅವರು, ಗಣೇಶ ವಿಸರ್ಜನಾ ಮೆರವಣಿಗೆಗಳು ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳಿಂದ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಶೆಟ್ಟಿ, ಜಿಲ್ಲಾ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ಇ.ಓಗಳು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
