ಮೂಡುಬಿದಿರೆ: ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಸಲುವಾಗಿ ಬಂಟರ ಸಂಘ (ರಿ.), ಮೂಡುಬಿದಿರೆ ಹಾಗೂ ಯುವ ಬಂಟರ ಸಂಘ, ಮೂಡುಬಿದಿರೆ ಇವರ ವತಿಯಿಂದ ಮೂಡುಬಿದಿರೆ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.
ಮೂಡುಬಿದಿರೆ ಪೊಲೀಸ್ ನಿರೀಕ್ಷಕರಾದ ರಾಜೇಂದ್ರ ಬಿ. ಈ ಸಂದರ್ಭದಲ್ಲಿ ಮಾತನಾಡಿ ರಸ್ತೆ ಸುರಕ್ಷತೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.
“ರಸ್ತೆ ಸುರಕ್ಷತೆ ಎಂಬುದು ಕೇವಲ ಪೊಲೀಸರ ಜವಾಬ್ದಾರಿಯಲ್ಲ. ವಾಹನ ಸವಾರರು, ಪಾದಚಾರಿಗಳು ಸೇರಿದಂತೆ ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ವರ್ತಿಸಿದಾಗ ಮಾತ್ರ ಸುರಕ್ಷಿತ ಸಂಚಾರ ವ್ಯವಸ್ಥೆಯನ್ನು ನಿರ್ಮಿಸಲು ಸಾಧ್ಯ. ವಿಶೇಷವಾಗಿ ವಾಹನ ಚಾಲಕರು ವೇಗದ ಮಿತಿ, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಬಳಕೆ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು” ಎಂದು ಅವರು ತಿಳಿಸಿದರು.
ಮೂಡುಬಿದಿರೆ ಪಟ್ಟಣದಲ್ಲಿ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಬ್ಯಾರಿಕೇಡ್‌ಗಳು ಸಹಕಾರಿಯಾಗಲಿವೆ. ಪೊಲೀಸ್ ಇಲಾಖೆಯ ಕಾರ್ಯಕ್ಕೆ ಪೂರಕವಾಗಿ ಸಂಘ-ಸಂಸ್ಥೆಗಳು ಕೈಜೋಡಿಸಿ ಇಂತಹ ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಬ್ಯಾರಿಕೇಡ್‌ಗಳನ್ನು ಒದಗಿಸಿರುವ ಬಂಟರ ಸಂಘ ಹಾಗೂ ಯುವ ಬಂಟರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ಸಾರ್ವಜನಿಕ ಸುರಕ್ಷತೆ ಹಾಗೂ ಸಮಾಜದ ಹಿತದೃಷ್ಟಿಯಿಂದ ಇಂತಹ ಸಹಕಾರ ಮುಂದುವರಿಯಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕಿ ಪ್ರತಿಭಾ ಮತ್ತು ಉಪ ನಿರೀಕ್ಷಕ ಕೃಷ್ಣಪ್ಪ ಹಾಗೂ ಪೊಲೀಸ್ ಸಿಬಂದ್ದಿ ವರ್ಗದವರು ಉಪಸ್ಥಿತರಿದ್ದರು.
ಬಂಟರ ಸಂಘ (ರಿ.), ಮೂಡುಬಿದಿರೆ ಇದರ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿ ಕಾರ್ಯದರ್ಶಿ ಸುಚರಿತ ಶೆಟ್ಟಿ, ಉಪಾಧ್ಯಕ್ಷರಾದ ಚೇತನ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಪುರುಷೋತ್ತಮ್ ಶೆಟ್ಟಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಯುವ ಬಂಟರ ಸಂಘ, ಮೂಡುಬಿದಿರೆ ಇದರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ, ಕಾರ್ಯದರ್ಶಿ ರಮೇಶ್ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
