ಅಕ್ಟೋಬರ್ 05 ರಂದು ಕಾರ್ಕಳದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ: ನವೀನ್ ನಾಯಕ್
ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರು ಭಾಗಿ: ವಿ. ಸುನಿಲ್ ಕುಮಾರ್ ನೇತೃತ್ವ.
*ಇದು ಕೇವಲ ಬಿಜೆಪಿಯ ಪ್ರತಿಭಟನೆಯಲ್ಲ ಸರ್ಕಾರದ ವಿವಿಧ ನಿರ್ಧಾರಗಳಿಂದ ಸಮಸ್ಯೆ ಎದುರಿಸುತ್ತಿರುವ ಬಡವರ, ರೈತರ, ಫಲಾನುಭವಿಗಳ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಹೋರಾಟ
ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು, ಬಡವರು ಹಾಗೂ ರೈತರ ಸಮಸ್ಯೆಗಳ ಕಡೆಗಣನೆ ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ವಿವಿಧ ಆಡಳಿತಾತ್ಮಕ ಸಮಸ್ಯೆಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ವತಿಯಿಂದ ಅಕ್ಟೋಬರ್ 5, ಸೋಮವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.
ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಆಡಳಿತದಲ್ಲಿ ಬಡವರು, ರೈತರು ಹಾಗೂ ಮಧ್ಯಮ ವರ್ಗದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಬಿಪಿಎಲ್ ಪಡಿತರ ಚೀಟಿಗಳ ರದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶದ ಕೊರತೆ, 94ಸಿ ಹಾಗೂ ಬಗರ್‌ಹುಕುಂ ಅಕ್ರಮ-ಸಕ್ರಮ ಅರ್ಜಿಗಳ ತಿರಸ್ಕಾರ, ಸಾಮಾಜಿಕ ಭದ್ರತಾ ಪಿಂಚಣಿಗಳ ಕಡಿತ, ಇ-ಸ್ವತ್ತು, ಖಾತಾ ಹಾಗೂ ಏಕವಿನ್ಯಾಸ ಅನುಮೋದನೆಗೆ ಸಂಬಂಧಿಸಿದ ಸಮಸ್ಯೆಗಳು, ವಿದ್ಯುತ್ ದರ ಏರಿಕೆ ಮತ್ತು ಅಘೋಷಿತ ವಿದ್ಯುತ್ ಕಡಿತ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ.
ಕಾರ್ಕಳ ತಾಲೂಕಿನಲ್ಲಿ 1000ಕ್ಕೂ ಅಧಿಕ ಬಿಪಿಎಲ್ ಕಾರ್ಡ್‌ಗಳು ರದ್ದಾಗಿರುವುದು, ೧೦,೦೯೦ಕ್ಕೂ ಅಧಿಕ ಅಕ್ರಮ-ಸಕ್ರಮ ಅರ್ಜಿಗಳು ತಿರಸ್ಕೃತವಾಗಿರುವುದು ಹಾಗೂ 10732ಕ್ಕೂ ಅಧಿಕ ಸಾಮಾಜಿಕ ಭದ್ರತಾ ಪಿಂಚಣಿಗಳ ವಿಚಾರ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ, ಮೂಲಸೌಕರ್ಯ, ಬಡವರ ವಸತಿ ಹಾಗೂ ಸಾರ್ವಜನಿಕರ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ನವೀನ್ ನಾಯಕ್ ತಿಳಿಸಿದ್ದಾರೆ.
ಇದು ಕೇವಲ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಲ್ಲ. ಸರ್ಕಾರದ ವಿವಿಧ ನಿರ್ಧಾರಗಳಿಂದ ಸಮಸ್ಯೆ ಎದುರಿಸುತ್ತಿರುವ ಬಡವರು, ರೈತರು, ಫಲಾನುಭವಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಹೋರಾಟವಾಗಿದೆ. ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖ ಮುಖಂಡರು ಭಾಗವಹಿಸುವ ಈ ಪ್ರತಿಭಟನೆಗೆ ಕಾರ್ಕಳ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಅಕ್ಟೋಬರ್ 5 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಕಚೇರಿ ಮುಂಭಾಗ ನಡೆಯುವ ಈ ಬೃಹತ್ ಪ್ರತಿಭಟನೆಯಲ್ಲಿ ಸಾರ್ವಜನಿಕರು, ರೈತರು, ಫಲಾನುಭವಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
